ಬೆಂಗಳೂರು : ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ವಸ್ತಾರೆ(51) ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ನಿಧನರಾಗಿದ್ದಾರೆ. ಹಲವು ತಿಂಗಳುಗಳಿAದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಜು.11 ರಂದು ನಿಧನರಾಗಿದ್ದು, ಅವರ ಅಗಲಿಕೆಗೆ ಚಿತ್ರರಂಗದ ನಟ–ನಟಿಯರು, ರಾಜಕೀಯ ಗಣ್ಯರು ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.
1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರ ‘ಮಸಣದ ಹೂವು’ ಸಿನಿಮಾದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ನಂತರ ‘ಇನ್ಸ್ಪೆಕ್ಟರ್ ವಿಕ್ರಮ್’ ಸೇರಿ ಹಲವು ಚಿತ್ರಗಳಲ್ಲಿ ಅಭಿನಯಿಸಿ ಖ್ಯಾತಿ ಪಡೆದಿದ್ದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ನಿರೂಪಕಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.
ಮುಂದೆ ಧಾರಾವಾಹಿಗಳಲ್ಲಿ ಅಭಿನಯಿಸಿದ ಅವರು ಕಿರುತೆರೆ ಮತ್ತು ಅನೇಕ ಸರಕಾರಿ ಮತ್ತು ಖಾಸಗಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿ ಜನಪ್ರಿಯತೆ ಗಳಿಸಿದ್ದರು.
2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ನ ಸ್ಪರ್ಧೆಯಾಗಿದ್ದರು. 2015ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ನಿರ್ವಹಿಸಿದ್ದರು. ‘ನಮ್ಮ ಮೆಟ್ರೋ’ ಅನೌನ್ಸ್ಮೆಂಟ್ ಸೇರಿದಂತೆ ಅನೇಕ ಪ್ರಕಟನೆಗಳಿಗೆ ಅವರು ಧ್ವನಿ ನೀಡಿದ್ದರು.