ಸೋಮವಾರಪೇಟೆ
ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ- ಕಾರ್ಯಕರ್ತರಿಗೆ ಕೃತಜ್ಞತಾ ಸಭೆಯು ಸ್ಥಳೀಯ ಕೊಡವ ಸಮಾಜದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು, ವಿರೋಧ ಪಕ್ಷದವರು ಸರ್ಕಾರದಲ್ಲಿ ಹಣವಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ 1.65 ಕೋಟಿ ಅನುದಾನದಲ್ಲಿ ಕಕ್ಕೆ ಹೊಳೆ ಸೇತುವೆ ನಿರ್ಮಿಸಿದ್ದೇವೆ. ಕಲ್ಕಂದೂರು - ಎಡದಂಟಿ ರಸ್ತೆಗೆ 20 ಕೋಟಿ ಬಿಡುಗಡೆ ಮಾಡಲಾಗಿದೆ, ಯಲಕನೂರು ಹೊಸಳ್ಳಿ ರಸ್ತೆಗೆ 16 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶನಿವಾರಸಂತೆಯಲ್ಲಿ ಬಸ್ ನಿಲ್ದಾಣ ಕಾರ್ಯಕ್ಕೆ ಹಣ ಬಿಡುಗಡೆಯಾಗಿದೆ ಎಂದರಲ್ಲದೇ, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿಗೆ 40 ರಿಂದ 50 ಲಕ್ಷ ಅನುದಾನ ಒದಗಿಸಲಾಗುವುದು, ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿರುವುದಕ್ಕೆ ಕಾರಣ ಕೊಡಬೇಕು. ಮುಂದಿನ ದಿನಗಳಲ್ಲಿ ಸರಿಪಡಿಸಿಕೊಂಡು ಮತದಾರರ ಮನಸ್ಸು ಗೆಲ್ಲಬೇಕು, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಸೂಕ್ಷ್ಮವಾಗಿದ್ದು, ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲುವ ಎಲ್ಲಾ ಅವಕಾಶಗಳಿದ್ದು, ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕೆಂದು ಶಾಸಕ ಡಾ.ಮಂತರ್ ಗೌಡ ಕಿವಿ ಮಾತು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಕೆ.ಎಂ.ಲೋಕೇಶ್ ಮಾತನಾಡಿ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಬೇಕು, ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದರು.
ಎಸ್ ಸಿ ಘಟಕದ ಜಿಲ್ಲಾಧ್ಯಕ್ಷ ಬಿ. ಈ. ಜಯೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿ ಮನೆಮನೆಗೆ ಮಾಹಿತಿ ನೀಡಬೇಕು. ಮತದಾರರಲ್ಲಿ ಜಾಗೃತಿ ಮೂಡಿಸಬೇಕೆಂದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್ ಮಾತನಾಡಿ, ಕಳೆದ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಕಡಿಮೆ ಸ್ಥಾನ ಗಳಿಸಿದ್ದರೂ ಮತಗಳಿಕೆಯ ಪ್ರಮಾಣ ಹೆಚ್ಚಿತ್ತು. ಈ ಬಾರಿ ಅತ್ಯಧಿಕ ಸ್ಥಾನಗಳಲ್ಲಿ ಗೆಲ್ಲಬೇಕು ತಾಲೂಕಿಗೆ ಕಾಂಗ್ರೆಸ್ ಸರ್ಕಾರದಿಂದ ಬಂದ ಅನುದಾನಗಳ ಬಗ್ಗೆ ಸದ್ಯದಲ್ಲೇ ಶ್ವೇತ ಪತ್ರ ಹೊರಡಿಸಲಾಗುವುದು ಎಂದರು.
ಕೆಡಿಪಿ ಸಮಿತಿ ಸದಸ್ಯ ಎಚ್.ಆರ್. ಸುರೇಶ್, ಮುಖಂಡರಾದ ಹೆಚ್.ಸಿ. ನಾಗೇಶ್ ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ ಮಾತನಾಡಿದರು.