ಮಡಿಕೇರಿ
=======================
ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯರಾಗಿದ್ದ ಮುಕ್ಕಾಟಿರ ಶಿವು ಮಾದಪ್ಪ ಅವರ ಅಂತ್ಯಕ್ರಿಯೆಯು ಕುಟ್ಟ ಗ್ರಾಮದ ಮುಕ್ಕಾಟಿರ ಕುಟುಂಬಸ್ಥರ ರುಧ್ರಭೂಮಿಯಲ್ಲಿ ಕೊಡವ ಸಾಂಪ್ರದಾಯಿಕ ವಿಧಿವಿಧಾನದಂತೆ ನೆರವೇರಿತು. ೪೯ ವರ್ಷ ಪ್ರಾಯದ ಮುಕ್ಕಾಟಿರ ಶಿವು ಮಾದಪ್ಪ ಅವರು ಭಾನುವಾರ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುತ್ತಿದ್ದ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದರು. ಶಿವು ಮಾದಪ್ಪ ಅವರು ಪತ್ನಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸೋಮವಾರದಂದು ಶಿವು ಮಾದಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರಾದ ಅಜ್ಜಿಕುಟ್ಟೀರ ಬೋಪಣ್ಣ, ಕೆಪಿಸಿಸಿ ವಕ್ತಾರ ಎಂ.ಲಕ್ಷö್ಮಣ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಎಂಎಲ್‌ಸಿ ವೀಣಾ ಅಚ್ಚಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೃತರ ಅಂತಿಮ ದರ್ಶನ ಪಡೆದರು. ಈ ಸಂದರ್ಭ ಟಿವಿ ಒನ್ ನೊಂದಿಗೆ ಮಾತನಾಡಿದ ಶಾಸಕ ಎ.ಎಸ್.ಪೊನ್ನಣ್ಣ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಿವು ಮಾದಪ್ಪ ಅವರು, ಒಬ್ಬ ಅತ್ಯುತ್ತಮ ಸಂಘಟಗಾರರಾಗಿ, ಯುವ ನಾಯಕರಾಗಿ ಗುರುತಿಸಿಕೊಂಡಿದ್ದು ಅವರ ಅಗಲಿಕೆಯು ಸಮಾಜಕ್ಕೆ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಅಪಾರ ನಷ್ಟವನ್ನುಂಟು ಮಾಡಿದೆ ಎಂದು ಕಂಬನಿ ಮಿಡಿದರು.
ಮುಕ್ಕಾಟಿರ ಶಿವು ಮಾದಪ್ಪ ಅವರ ಅಕಾಲಿಕ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸಂತಾಪ ಸೂಚಿಸಿದ್ದಾರೆ.