ರಾಜ್ಯಾದ್ಯಂತ ನಾಳೆಯಿಂದ SSLC ಪರೀಕ್ಷೆ ಆರಂಭ, ಆಲ್ ದಿ ಬೆಸ್ಟ್... -
ಬೆಂಗಳೂರು: ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ ನಾಳೆಯಿಂದ(ಮಾ.22) ಆರಂಭವಾಗಲಿದ್ದು, ಪರೀಕ್ಷೆ ನಡೆಸಲು ಮಂಡಳಿ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದೆ.
ರಾಜ್ಯದ 15,881 ಪ್ರೌಢಶಾಲೆಗಳ 4.61 ಲಕ್ಷ ಬಾಲಕರು, 4.34 ಲಕ್ಷ ಬಾಲಕಿಯರು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ.
ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಪರೀಕ್ಷೆಗಳು ಬೆಳಗ್ಗೆ 10ರಿಂದ 1.15ರವರೆಗೆ ನಡೆಯಲಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲ 2818 ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ. ಇಡೀ ಕೇಂದ್ರದಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಇದನ್ನು ಜಿಲ್ಲಾ ಪಂಚಾಯಿತಿ ಸಿಇಒ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯಿಂದ ನಿಯಂತ್ರಿಸಲಾಗುತ್ತದೆ. ಎಲ್ಲ ದೃಶ್ಯಗಳೂ ಕಂಪ್ಯೂಟರ್ ಪರದೆಯಲ್ಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.
ಮಾ.21ರಿಂದ ಏ.4 ರವರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ 2023 ರ ಕಲಂ 163 ಮೇರೆಗೆ ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದೆ.
ಈ ನಿಯಮಗಳ ಪಾಲನೆ ಕಡ್ಡಾಯ
– ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ ಗಳನ್ನು ಮಾತ್ರ ಬಳಸಬಹುದು.
– ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ.
– ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
– ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
– ಮೊಬೈಲ್ ಫೋನ್, ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆ ನೀಡಲಾಗುವುದಿಲ್ಲ.
– ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝೆರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 21-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್‌ಸಿಇಆರ್‌ಟಿ), ಸಂಸ್ಕೃತ, 24-ಗಣಿತ, 26-ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, 29-ಸಮಾಜ ವಿಜ್ಞಾನ, ಏಪ್ರಿಲ್ 1-ಅರ್ಥಶಾಸ್ತ್ರ, ಎಂಜಿನಿಯರಿಂಗ್ ವಿಷಯಗಳು, 2-ವಿಜ್ಞಾನ ಹಾಗೂ ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 4-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್‌ಎಸ್‌ಕ್ಯೂಎಫ್ ವಿಷಯಗಳು.