ಕೂಡಿಗೆ : ಈ ಬಾರಿ ಸುರಿದ ವ್ಯಾಪಕ ಮಳೆಯಿಂದಾಗಿ ದೊಡ್ಡತ್ತೂರು ಗ್ರಾಮಕ್ಕೆ ತೆರಳುವ ರಸ್ತೆ ಕೆಸರು ಗದ್ದೆಯಂತಾಗಿದ್ದು ಜನಪ್ರತಿನಿಧಿಗಳಿಗೆ ಅಧಿಕಾರಿಗಳಿಗೆ ಈ ಭಾಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತ್ತೂರು ಗ್ರಾಮದ ರಸ್ತೆ ಸಮಸ್ಯೆಯಿಂದಾಗಿ ಗ್ರಾಮಸ್ಥರು ಪರದಾಡುವಂತಾಗಿದೆ.
ದೊಡ್ಡತ್ತೂರು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಈ ರಸ್ತೆಯಲ್ಲಿ ಸಂಚಾರ ಅಯೋಮಯವಾಗಿದೆ ಒಂದು ವಾರದೊಳಗೆ ಈ ರಸ್ತೆಯನ್ನು ಸರಿಪಡಿಸದೇ ಇದ್ದರೆ ಗ್ರಾಮಸ್ಥರು ಒಟ್ಟು ಸೇರಿ ಪ್ರತಿಭಟನೆ ಮಾಡುವುದಾಗಿ ತಿಳಿಸಿದ್ದಾರೆ.
ಮಳೆಗಾಲದಲ್ಲಿ ಮಾತ್ರವಲ್ಲದೆ ಬೇಸಿಗೆ ಕಾಲದಲ್ಲೂ ಗುಂಡಿಬಿದ್ದಿರುವ ರಸ್ತೆಗಳಲ್ಲಿನ ಸಂಚಾರ ದುಸ್ತರವಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಪಡಿಸುವಂತೆ ಈ ಹಿಂದೆ ಹಲವು ಬಾರಿ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳ ಬಳಿ ಗ್ರಾಮಸ್ಥರು ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ ಎಂದು ಸ್ಥಳಿಯರು ಆರೋಪಿಸಿದ್ದಾರೆ.
ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇನ್ನಾದರೂ ದೊಡ್ಡತ್ತೂರು ಗ್ರಾಮಕ್ಕೆ ತೆರಳುವ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.